ಪೋಗದಿರೆಲೊ ರಂಗ ಬಾಗಿಲಿಂದಾಚೆಗೆ
( ರಾಗ ಶಂಕರಾಭರಣ ಅಟ ತಾಳ)
ಪೋಗದಿರೆಲೊ ರಂಗ ಬಾಗಿಲಿಂದಾಚೆಗೆ || ಪ ||
ಭಾಗವತರು ಕಂಡರೆತ್ತಿಕೊಂಡೊಯ್ವರೊ ||ಅ ||
ಸುರ ಮುನಿಗಳು ತಮ್ಮ ಹೃದಯಗಹ್ವರದಲ್ಲಿ
ಪರಮಾತ್ಮನ ಕಾಣದೆ ಅರಸುವರೊ
ದೊರಕದ ವಸ್ತುವಿಂದು ದೊರಕಿದು ತಮಗೆಂದು
ಹರುಷದಿಂದಲಿ ನಿನ್ನ ಕರೆದೆತ್ತಿಕೊಂಬರು ||
ಅಗಣಿತ ಗುಣ ನಿನ್ನ ಜಗದ ನಾರಿಯರೆಲ್ಲ
ಹಗೆಯಾಗಿ ನುಡಿವರೊ ಗೋಪಾಲನೆ
ಮಗುಗಳ ಮಾಣಿಕ್ಯ ತಗುಲಿತು ಕರಕೆಂದು
ಬೇಗದಿಂದಲಿ ಬಂದು ಬಿಗಿದಪ್ಪಿಕೊಂಬರೊ ||
ದಿಟ್ಟ ನಾರಿಯರೆಲ್ಲ ಇಷ್ಟವ ಸಲಿಸೆಂದು
ಅಟ್ಟಟ್ಟಿ ಬೆನ್ಹಿಂದೆ ತಿರುಗುವರೊ
ಸೃಷ್ಟೀಶ ಪುರಂದರವಿಠಲರಾಯನೆ
ಇಷ್ಟಿಷ್ಟು ಬೆಣ್ಣೆಯ ಕೊಟ್ಟೇನೋ ರಂಗಯ್ಯ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments